ಸಾಧನೆಯೇ ನಮ್ಮ ಮುಂದಿನ ಗೆಲುವಿನ ಶ್ರೀರಕ್ಷೆ

ದಾವಣಗೆರೆ; ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 25 ರಿಂದ 26 ಕ್ಷೇತ್ರಗಳಲ್ಲಿ ವಿಜಯಿಯಾಗಲಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಆಶಯ ವ್ಯಕ್ತಪಡಿಸಿದ್ದಾರೆ.ನಗರದ ಅರುಣಚಿತ್ರ ಮಂದಿರ ಬಳಿಯಿರುವ ಹಳೇ ವಾಣಿಹೊಂಡಾ ಶೋರೂಂ ನಲ್ಲಿ ಲೋಕಸಭಾ ಚುನಾವಣಾ ಅಂಗವಾಗಿ ಆರಂಭಿಸಲಾದ ನೂತನ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.

ಕೇಂದ್ರದ ನರೇಂದ್ರಮೋದಿ ಹಾಗೂ ರಾಜ್ಯದ ಬಿ.ಎಸ್.ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ನಡೆದ ಸಾಧನೆಯೇ ನಮ್ಮ ಗೆಲುವಿನ ಶ್ರೀರಕ್ಷೆ, ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಒಂದುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಯ ಶಾಸಕರು ಇದ್ದಾರೆ.

ಅವರು ಈಗಾಗಲೇ ಹೆಚ್ಚು ಒತ್ತು ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ. ನಮ್ಮ ಪಕ್ಷದ ಶಾಸಕರು ಇಲ್ಲದ ಹರಿಹರ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು, ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿದ್ದಾರೆ. ನಾನು ಕೂಡಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದೇನೆ. ಈಗ ನಡೆಯುತ್ತಿರುವ ಲೋಕಸಭಾ ಉಪ ಚುನಾವಣೆಯ ಶಿವಮೊಗ್ಗ ಮತ್ತು ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿನ ಹೊಣೆ ನೀಡಲಾಗಿದೆ. ಇದರಿಂದ ಆ ಕ್ಷೇತ್ರಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದೇನೆ. ಇಲ್ಲಿಯ ಅಭ್ಯರ್ಥಿಗಳು ಗೆಲುವು ಖಚಿತವಾಗಿದೆ. ಅಲ್ಲದೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೂ, ಸಮ್ಮಿಶ್ರ ಸರಕಾರದಿಂದ ಜನರು ಬೇಸತ್ತಿದ್ದು, ಅಲ್ಲಿಯೂ ಕೂಡಾ ಎಲ್ಲಾ ಮತದಾರರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದ್ದರಿಂದ ಅಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಸುಲಭವಾಗಿದೆ. ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.


ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ದೇಶದಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕೆಂದು ಜನರು ನಿರ್ಧರಿಸಿದ್ದರಿಂದ ರಾಜ್ಯದ 25-26 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಹೆಚ್ಚಾಗಿ ಬೆಳೆಯುವ ಮೆಕ್ಕೆಜೋಳ ಹಾಗೂ ಭತ್ತ ಖರೀದಿ ಕೇಂದ್ರ ಆರಂಭಕ್ಕೆ ರಾಜ್ಯ ಸರಕಾರ ಕೂಡಲೇ ಕ್ರಮಕೈಗೊಳ್ಳಬೇಕು. ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದ ಪರಿಣಾಮ ನಾಲ್ಕು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

ಚನ್ನಗಿರಿ, ಹೊನ್ನಾಳಿ ಹಾಗೂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ನ್ಯಾಮತಿ ತಾಲೂಕುಗಳನ್ನೂ ಕೂಡಾ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಜಿಲ್ಲೆಯ ಮಾಯಕೊಂಡ, ಜಗಳೂರು, ಹರಪನಹಳ್ಳಿ ತಾಲೂಕುಗಳಲ್ಲಿ ಈಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯುವ ನೀರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ, ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ನೀಗಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಸ್.ಎ.ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರಪ್ಪ, ಪ್ರೊ.ಲಿಂಗಣ್ಣ, ಪಾಲಿಕೆ ಸದಸ್ಯ ಡಿ.ಕುಮಾರ್, ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಪ್ರೊ.ನರಸಿಂಹಪ್ಪ, ರಮೇಶ್ ನಾಯಕ್, ಎನ್.ರಾಜಶೇಖರ್, ಶಾಂತಕುಮಾರ್ ಸೋಗಿ, ರಾಜನಹಳ್ಳಿ ಶಿವಕುಮಾರ್, ಪಿ.ಸಿ.ಶ್ರೀನಿವಾಸ್, ಶಿವನಗೌಡ ಪಾಟೀಲ, ಧನುಶ್ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್.

ಶಾಮನೂರು ನುಡಿದಂತೆ ನಡೆಯಲಿ

ದಾವಣಗೆರೆಯ ಗಾಜಿನ ಮನೆ ನಿರ್ಮಾಣಕ್ಕೆ ಬಿಜೆಪಿಯವರು ಪ್ರಸ್ತಾವನೆ ಸಲ್ಲಿಸಿಲ್ಲ. ಯಾವುದೇ ರೀತಿಯ ಪತ್ರ ಬರೆದಿಲ್ಲ. ಬರೆದಿದ್ದರೆ ತಾವು ರಾಜೀನಾಮೆ ಸಲ್ಲಿಸುವುದಾಗಿ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಟೀಕಿಸಿದ ಸಂಸದರು, 2013-14ರಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಎಸ್.ಎ.ರವೀಂದ್ರನಾಥ ಪ್ರಸ್ತಾವನೆ ಸಲ್ಲಿಸಿದ್ದರು ಎಂಬ ದಾಖಲೆಯನ್ನು ಬಿಡುಗಡೆ ಮಾಡಿ, ಶಾಸಕ ಶಾಮನೂರು ಶಿವಶಂಕರಪ್ಪ ನುಡಿದಂತೆ ನಡೆಯಲು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಿ ಎಂಬ ಸವಾಲು ಹಾಕಿದರು. ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹಿರಿಯರು. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರೂ ಕೂಡಾ ಸಚಿವರಾಗಿದ್ದರು. ಸುಳ್ಳು ಹೇಳಿಕೆ ನೀಡುವುದನ್ನು, ಆರೋಪ, ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ಶಾಸಕ ಎಸ್.ಎ.ರವೀಂದ್ರನಾಥ ಅವರೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕೈಜೋಡಿಸಬೇಕೆಂದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *